




ಚಂಡೀಗಢ: ಹರಿಯಾಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಜಿಮ್ ಮಾಲೀಕನೊಬ್ಬನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೇವಲ 5 ಸೆಕೆಂಡುಗಳಲ್ಲಿ ಸುಮಾರು 10 ಗುಂಡು ಹಾರಿಸಿ ಈ ಕೃತ್ಯ ಎಸಗಿದ್ದಾರೆ.
ಕಪಿಲ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ವ್ಯಕ್ತಿ. ಈ ಕೊಲೆಯನ್ನು ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ತಾವೇ ಮಾಡಿರುವುದಾಗಿ ಒಪ್ಪಿಕೊಂಡಿದೆ. ಈ ಗ್ಯಾಂಗಿನ ಹರಿ ಬಾಕ್ಸರ್ ಎಂಬಾತ ಈ ಬಗ್ಗೆ ಆಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾನೆ.
ಗುರುವಾರ ಮುಂಜಾನೆ 5:30ರ ಸುಮಾರಿಗೆ ಹನ್ಸಿಯ ಫವ್ವಾರಾ ಚೌಕ್ ಬಳಿ ಘಟನೆ ನಡೆದಿದೆ. ಕಪಿಲ್ ತಮ್ಮ ಜಿಮ್ ಬಳಿ ಯುವಕ, ಯುವತಿಯರಿಗೆ ತರಬೇತಿ ನೀಡುತ್ತಿದ್ದಾಗ ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಬಂದ ಕಿಡಿಗೇಡಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಹಳ ಹತ್ತಿರದಿಂದ ಕಪಿಲ್ ತಲೆಗೆ ಗುಂಡು ಹಾರಿಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಮ್ ಮಾಲೀಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಲ್ಲೇ ಪಕ್ಕದಲ್ಲಿ ವರ್ಕ್ಔಟ್ ಮಾಡುತ್ತಿದ್ದ ಶಿಖಾ ಎಂಬ ಮಹಿಳೆಗೂ ಗುಂಡಿನ ಚೂರುಗಳು ತಗುಲಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಹಿಸ್ಸಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಪ್ರಕರಣದ ಗಂಭೀರತೆಯನ್ನು ಅರಿತಿರುವ ಪೊಲೀಸರು ಕ್ರೈಮ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.







