Sunday, June 29, 2025
spot_imgspot_img
spot_imgspot_img

ಬಿಜೆಪಿ ನೇತೃತ್ವದ ಎನ್‌ಡಿಎ ಸಭೆ ಮುಕ್ತಾಯ; ನಾಯಕರಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆ

- Advertisement -
- Advertisement -

ದೆಹಲಿ: ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ ಚರ್ಚಿಸಿದ್ದಾರೆ.

ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡಿದೆ. ಎನ್ ಡಿಎ ನಾಯಕನಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಮಿತ್ರ ಪಕ್ಷಗಳ ಪಾತ್ರವು ನಿರ್ಣಾಯಕವಾಗಿದೆ. ಹಾಗಾಗಿ, ಮೋದಿ ಹಾಗೂ ಅಮಿತ್‌ ಶಾ ಅವರು ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿ, ಸರ್ಕಾರ ರಚಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಎಲ್ಲ ಪಕ್ಷಗಳು ಬೆಂಬಲ ಪತ್ರಗಳನ್ನು ನೀಡಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಲಾಗುತ್ತದೆ.

ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಜೆಡಿಯು, ಟಿಡಿಪಿ, ಶಿವಸೇನೆ ಹಾಗೂ ಎಲ್‌ಜೆಪಿ ಪಕ್ಷಗಳ ಪಾತ್ರ ನಿರ್ಣಾಯಕವಾಗಿರುವ ಕಾರಣ ಆಯಾ ಪಕ್ಷಗಳ ನಾಯಕರು ಮಹತ್ವದ ಖಾತೆ, ಹುದ್ದೆ ಸೇರಿ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಕೇಂದ್ರದಲ್ಲಿ ಒಂದು ಖಾತೆಗೆ ಬೇಡಿಕೆ ಇಟ್ಟಿದ್ದು, ಅವರು ಕೃಷಿ ಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಎನ್‌ಡಿಎ ಸಭೆಯಲ್ಲಿ ಎಲ್ಲ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಜೂನ್‌ 7ರಂದು ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಅವರ ಜತೆಗೆ ಸಚಿವರಾಗಿ 21 ಸಂಸದರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ಜೂನ್‌ 8ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈಗ ಒಂದು ದಿನ ಮುಂಚಿತವಾಗಿ ಅಂದರೆ ಶುಕ್ರವಾರವೇ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಎನ್‌ಡಿಎ ಸಭೆಯಲ್ಲಿಯೇ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬಹುಮತ ಗಳಿಸಿದ ಒಂದು ದಿನದ ನಂತರ ಈ ಸಭೆ ನಡೆದಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ದಾರಿ ಮಾಡಿಕೊಟ್ಟಿದೆ. ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದರು. ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜಿಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿದ್ದರು.

- Advertisement -

Related news

error: Content is protected !!