Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಸಹಿತ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ!

- Advertisement -G L Acharya panikkar
- Advertisement -

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ 19 ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಐದು ಜಿಲ್ಲೆಗಳ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, “ಒಂದು ತಿಂಗಳಿಂದ ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದು ಕಡಿಮೆಯಾಗಿದೆ. ಜೊತೆಗೆ ನಾವು ಲಸಿಕೆ ಅಭಿಯಾನಕ್ಕೂ ಒತ್ತು ಕೊಟ್ಟಿದ್ದೇವೆ. ಲಸಿಕೆ ಹಾಕುವುದನ್ನು ಈಗಿರುವುದಕ್ಕಿಂತ ಹೆಚ್ಚು ಮಾಡಲು ಸೂಚಿಸಿದ್ದೇನೆ ಎಂದಿದ್ದಾರೆ.

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದ್ದಾರೆ.

ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಸೂಚಿಸಿದ್ದಾರೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಕಟ್ಟುನಿಟ್ಟಾಗಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!