


ಬ್ರಹ್ಮಾವರ : ಒಣ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಹೈ-ಟೆನ್ಷನ್ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾರು ತೆಂಕುಬೆಟ್ಟು ಎಂಬಲ್ಲಿ ನಡೆದಿದೆ.
ಒಣ ಹುಲ್ಲಿನ ಕಟ್ಟುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ಹೈ-ಟೆನ್ಷನ್ ವಿದ್ಯುತ್ ತಂತಿ ತಗುಲಿದೆ. ಇದರಿಂದ ಉಂಟಾದ ಕಿಡಿ ಹಾಗೂ ಶಾರ್ಟ್ ಸರ್ಕ್ಯೂಟ್ನಿಂದ ಒಣ ಹುಲ್ಲಿಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಕಾಣಿಸಿಕಳ್ಳುತ್ತಿದ್ದಂತೆಯೇ ತಕ್ಷಣ ಎಚ್ಚೆತ್ತ ಚಾಲಕ, ಹೊತ್ತಿ ಉರಿಯುತ್ತಿದ್ದ ಎರಡು ಹುಲ್ಲಿನ ಕಟ್ಟುಗಳನ್ನು ರಸ್ತೆಗೆ ಎಸೆದಿದ್ದಾರೆ. ಬಳಿಕ ಸಂಚಾರ ದಟ್ಟಣೆ ಮತ್ತು ಹೆಚ್ಚಿನ ಅಪಾಯವನ್ನು ತಪ್ಪಿಸಲು ಲಾರಿಯನ್ನು ಸಮೀಪದ ಮೈದಾನಕ್ಕೆ ಚಲಾಯಿಸಿಕೊಂಡು ಹೋಗಿ ನೀರು ಸುರಿದು ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಮಾಹಿತಿ ತಿಳಿದು, ಉಡುಪಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಸುಮಾರು 1.5 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.








