


ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆಯಲ್ಲಿದ್ದ ಗೃಹೋಪಯೋಗಿ ಉತ್ಪನ್ನಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.
ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿ ಗ್ರಾಮದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ಗಳ ಅಸೆಂಬ್ಲಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕಾರ್ಖಾನೆಯೊಳಗೆ ವ್ಯಾಪಿಸಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಚಿಂತಾಮಣಿ ಹಾಗೂ ಶಿಡ್ಲಘಟ್ಟದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದು, ಸ್ಥಳೀಯ ಗ್ರಾಮಸ್ಥರೂ ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ ಎಂದು ತಿಳಿದುಬಂದಿದೆ.







