


ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ(ಎನ್‌ಎಸಿಒ) ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ ಹೆಚ್‌ಐವಿ ಸೋಂಕಿತರಾಗಿದ್ದು, ಈ ಪೈಕಿ ಸುಮಾರು 2.05 ಲಕ್ಷ ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ(ಎಆರ್‌ಟಿ) ಪಡೆಯುತ್ತಿದ್ದಾರೆ. ಉಳಿದಂತೆ ಸುಮಾರು 54,000 ಮಂದಿಗೆ ತಾವು ಹೆಚ್‌ಐವಿ ಪೀಡಿತರಾಗಿರುವುದೇ ಅರಿವಿಲ್ಲ.
ಆರೋಗ್ಯ ಇಲಾಖೆಯ ಪ್ರಕಾರ, 18 ರಿಂದ 35 ವರ್ಷದೊಳಗಿನ ಯುವ ಸಮೂಹದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. 18 ರಿಂದ 25 ವರ್ಷದ ಸುಮಾರು 7,000 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ, ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಈ ವಿಶೇಷ ಅಭಿಯಾನಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು. ವಿದ್ಯಾರ್ಥಿಗಳ ಗೌಪ್ಯತೆ ಕಾಪಾಡುವ ಉದ್ದೇಶದಿಂದ ‘ನಿಮ್ಮ ಹೆಚ್‌ಐವಿ ಸ್ಥಿತಿ ತಿಳಿದುಕೊಳ್ಳಿ’ ಎಂಬ ಕ್ಯೂಆರ್ ಕೋಡ್ ಆಧಾರಿತ ಸ್ವಯಂ ಅಪಾಯ ಮೌಲ್ಯಮಾಪನ ವ್ಯವಸ್ಥೆಯನ್ನೂ ಪರಿಚಯಿಸಲಾಗುತ್ತಿದೆ. ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಚ್‌ಐವಿ ಅಪಾಯದ ಮಟ್ಟವನ್ನು ಗೌಪ್ಯವಾಗಿ ಮತ್ತು ಸುಲಭವಾಗಿ ಪರಿಶೀಲಿಸಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ಆರೋಗ್ಯ ಇಲಾಖೆ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಈ ಮಹತ್ವದ ಕ್ರಮವು, ಆರಂಭಿಕ ಹಂತದಲ್ಲೇ ಯುವಜನರಲ್ಲಿ ಕಾಣಿಸಿಕೊಳ್ಳುವ ಹೆಚ್‌ಐವಿ ಸೋಂಕನ್ನು ಪತ್ತೆಹಚ್ಚಿ ಚಿಕಿತ್ಸೆ ಕೊಡುವುದು ಹಾಗೂ ಜಾಗೃತಿ ಮೂಡಿಸುವ ಉದ್ದೇಶ ಹೊಂದಿರುವುದಾಗಿ ತಿಳಿದುಬಂದಿದೆ.








