




ಮಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಕನಸಾಗಿರುವ ಹಾಗೂ ಕರಾವಳಿಯ ಅಸ್ಮಿತೆಯಾಗಿರುವ ತುಳು ಭಾಷೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇತೃತ್ವದ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಿತು.
ತುಳು ಭಾಷೆಯು ತನ್ನದೇ ಆದ ಸುದೀರ್ಘ ಇತಿಹಾಸ ಹಾಗೂ ಶ್ರೀಮಂತ ಸಾಹಿತ್ಯ, ಸಂಸ್ಕೃತಿಯನ್ನು ಹೊಂದಿದ್ದು, ಮುಂಬರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಮಾನ್ಯತೆ ನೀಡುವ ವಿಷಯವನ್ನು ಮಂಡಿಸಿ ಗಂಭೀರವಾಗಿ ಚರ್ಚಿಸಬೇಕು ಹಾಗೂ ಕರಾವಳಿಯ ಜನರ ಭಾವನೆಗೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ನಿಯೋಗವು ಸಚಿವರಲ್ಲಿ ಮನವಿ ಮಾಡಿತು.

ಕರಾವಳಿ ಜಿಲ್ಲೆಗಳ ಲಕ್ಷಾಂತರ ಜನರ ಮಾತೃಭಾಷೆಯಾದ ತುಳು ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನ ಸಿಗಬೇಕಾದರೆ ಮೊದಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಅಧಿಕೃತ ಮಾನ್ಯತೆ ಸಿಗುವುದು ಅಗತ್ಯವಾಗಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಈ ದಶಕಗಳ ಬೇಡಿಕೆಯನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ನಿಯೋಗದ ಪ್ರಮುಖರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮೋಹನ್ ಶೆಟ್ಟಿ ಪಂಜಿಕಲ್ಲು, ಮಧುಸೂದನ ಶೆಣೈ, ನವೀನ್ ಡಿಸೋಜಾ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.








