





ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿರುವ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆಯೋಜಿಸಿದ್ದ ಆರೋಗ್ಯ ಶಿಕ್ಷಣ ಇಲಾಖೆ ಸಚಿವ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೆರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ ಎಂದರು.ತೀವ್ರ ಉಸಿರಾಟ ತೊಂದರೆ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.