ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗುವ ಮಾರ್ಗಮಧ್ಯೆಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿಗೆ ಮೂರು ದಿನಗಳ ಹಿಂದೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬಾಲಕಿ ಮತ್ತು ಆಕೆಯ ಪೋಷಕರು ಇದು ಸಾಮಾನ್ಯ ಹೊಟ್ಟೆನೋವು ಎಂದು ಭಾವಿಸಿ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಗರ್ಭಿಣಿಯಾಗಿರುವುದನ್ನು ಪತ್ತೆಹಚ್ಚಿ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು ಎನ್ನಲಾಗಿದೆ.ವೈದ್ಯರ ಸಲಹೆಯಂತೆ ಬಾಲಕಿಯನ್ನು ಆ್ಯಂಬುಲೆನ್ಸ್‌ನಲ್ಲಿ ಚಾಮರಾಜನಗರಕ್ಕೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡು, ಆ್ಯಂಬುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಸದ್ಯ ತಾಯಿ ಮತ್ತು ಮಗು ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಆಘಾತಕಾರಿ ಘಟನೆಯ ಬಳಿಕ ಬಾಲಕಿಯು ತನ್ನ ತಂದೆಯ ಬಳಿ ಸಂಬಂಧಿಯೂ ಆಗಿರುವ 46 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ತಿಳಿಸಿದ್ದಾಳೆ.ಬಾಲಕಿಯ ಹೇಳಿಕೆಯನ್ನಾಧರಿಸಿ ಆಕೆಯ ತಂದೆ ಕೂಡಲೇ ಬೇಗೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.








