

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 2022ಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಶೇ.22ರಷ್ಟು ಏರಿಕೆಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಕಳೆದ ಕೆಲವು ದಿನಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಹೀಗಾಗಿ ಎಲ್ಲರೂ ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ,
ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಈ ನಡುವೆ ಪ್ರಕರಣಗಳ ತೀವ್ರತೆಯನ್ನು ಅಧ್ಯಯನ ಮಾಡಲು ಮತ್ತು ಹೊಸ ವೈರಸ್‌ಗಳನ್ನು ಗುರುತಿಸಲು ಶಾಲೆಗಳು, ದೇವಸ್ಥಾನಗಳು, ಮನೆಗಳು ಮತ್ತು ಹೆಚ್ಚಿನ ರೋಗಿಗಳ ಭೇಟಿಯಿರುವ ಆಸ್ಪತ್ರೆಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಮಕ್ಕಳಲ್ಲಿ ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ)ರು ಹೇಳಿದ್ದಾರೆ.