ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದು, ಸಿನಿರಂಗಕ್ಕೆ ಆಘಾತ ಉಂಟುಮಾಡಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಬುಧವಾರ ಮುಂಜಾನೆ ಮನೆಯಲ್ಲಿ ಅಸ್ವಸ್ಥಗೊಂಡ ದಿಲೀಪ್ ರಾಜ್ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್, ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಗಮನಾರ್ಹ ಪಾತ್ರಗಳಲ್ಲಿ ನಟಿಸಿದ್ದರು.ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದ ಅವರು, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಜೊತೆಗೆ ‘ಪಾರು’ ಹಾಗೂ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಿಸಿ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.
ರಂಗಭೂಮಿಯ ಮೇಲೂ ಅಪಾರ ಆಸಕ್ತಿ ಹೊಂದಿದ್ದ ದಿಲೀಪ್ ರಾಜ್, ಹಲವು ನಾಟಕಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದರು.ದಿಲೀಪ್ ರಾಜ್ ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗದ ನಟರು, ನಿರ್ದೇಶಕರು, ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಸಿನಿರಂಗ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತಾಗಿದೆ.








