




ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಕುಳಾಯಿಗುಡ್ಡೆ ಪ್ರದೇಶದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 25ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಣ್ಣಪ್ಪ ಸ್ವಾಮಿ @ ಮನು (26) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಬಂಧಿತ ಆರೋಪಿಯಿಂದ ಸುಮಾರು 15 ಗ್ರಾಂ ಎಂಡಿಎಂಎ (ಅಂದಾಜು ಮೌಲ್ಯ ₹1.50 ಲಕ್ಷ), ಮೊಬೈಲ್ ಫೋನ್, ಜಿಪ್ ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹2,10,500 ಎಂದು ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದು, ಮಾದಕವಸ್ತು ಮಾರಾಟ ಹಾಗೂ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








