ದುಬೈ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಇರಾನಿನಿಂದ ಕ್ಷಿಪಣಿ ದಾಳಿ ನಡೆದಿದೆ ಎನ್ನುವ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು Al Jazeera ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಪರಿಶೀಲನೆ ನಡೆಸಿದ ದೃಶ್ಯಗಳಲ್ಲಿ, ದಾಳಿಯ ನಂತರ ವಿಮಾನ ನಿಲ್ದಾಣದ ಪ್ರಯಾಣಿಕರ ಲಾಂಜ್ ಭಾಗಕ್ಕೆ ಹಾನಿಯಾಗಿದೆ ಎಂದು ಹೇಳಲಾಗಿದೆ. ವಿಮಾನ ನಿಲ್ದಾಣದ ಸಮೀಪ ಚಿತ್ರೀಕರಿಸಲಾಗಿದೆ ಎನ್ನಲಾದ ವೀಡಿಯೊಗಳಲ್ಲಿ ಸ್ಫೋಟದ ಶಬ್ದಗಳು ಕೇಳಿಬಂದಿದೆ ಎನ್ನಲಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್‌ನ ವಿವಿಧ ಪ್ರದೇಶಗಳಲ್ಲಿ ತುರ್ತು ಎಚ್ಚರಿಕೆ ಸಂದೇಶಗಳನ್ನು ರವಾನಿಸಿ, ನಿವಾಸಿಗಳು ಹಾಗೂ ಪ್ರವಾಸಿಗರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕ್ಷಿಪಣಿ ಬೆದರಿಕೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.








