


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.
ನಿನ್ನೆ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಸಂಘಟನೆಗಳ ಒತ್ತಾಯದ ಬಳಿಕ ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.