ರಾಜೇಶ್ ಮಿತ್ತನಡ್ಕ ಬೆಳಗಾವಿ ಜಿಲ್ಲೆಯ ಸವದತ್ತಿ ಠಾಣಾ ವ್ಯಾಪ್ತಿಗೆ ಗಡಿಪಾರು





ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್. ಕೆ., ಐಪಿಎಸ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ನಾಯಕ್ ಅವರ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ರೌಡಿ ಹಾಳೆ ತೆರೆದು ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಅಡಿಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅವರ ಚಟುವಟಿಕೆಗಳು ಸಾರ್ವಜನಿಕರಿಗೆ ಭಯ, ಅಪಾಯ ಅಥವಾ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂಬ ಅಂಶಗಳು ಕಂಡುಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಕಲಂ 55(ಬಿ)ಗೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆ, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜೇಶ್ ನಾಯಕ್ ಅವರನ್ನು ಅವರ ಅಪರಾಧ ಚಟುವಟಿಕೆಗಳ ಪರಿಸರದಿಂದ ದೂರವಿಡುವುದು ಅಗತ್ಯವೆಂದು ಪರಿಗಣಿಸಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.
ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶದಂತೆ ರಾಜೇಶ್ ನಾಯಕ್ ಅವರನ್ನು 2026ರ ಆಗಸ್ಟ್ 26ರಿಂದ 2027ರ ಫೆಬ್ರವರಿ 26ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವಂತೆ ಸೂಚಿಸಲಾಗಿದೆ.
ಗಡಿಪಾರು ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಅಲ್ಲದೆ, ಪ್ರತಿ ಏಳು ದಿನಗಳಿಗೊಮ್ಮೆ ಸವದತ್ತಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮುಂದೆ ಹಾಜರಾಗಿ ಹಾಜರಾತಿ ದಾಖಲಿಸಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.
ರಾಜೇಶ್ ನಾಯಕ್ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ನಿಗದಿಪಡಿಸುವ ವಿಚಾರಣಾ ದಿನಾಂಕಗಳಲ್ಲಿ ಹಾಜರಾಗಲು ಮಾತ್ರ ಅನುಮತಿ ನೀಡಲಾಗಿದೆ. ನ್ಯಾಯಾಲಯದ ವಿಚಾರಣೆ ಮುಗಿದ ಬಳಿಕ ಅದೇ ದಿನ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಮರಳುವಂತೆ ಸೂಚಿಸಲಾಗಿದೆ.
ಗಡಿಪಾರು ಆದೇಶವನ್ನು ಉಲ್ಲಂಘಿಸಿದಲ್ಲಿ ಅವರನ್ನು ಬಂಧಿಸಿ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸುವುದು ಹಾಗೂ ಅವರು ಆದೇಶ ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸುವಂತೆ ಪೊಲೀಸ್ ನಿರೀಕ್ಷಕರು, ವಿಟ್ಲ ಪೊಲೀಸ್ ಠಾಣೆಯವರಿಗೆ ಸೂಚಿಸಲಾಗಿದೆ.
ಆದೇಶದಿಂದ ಅಸಮಾಧಾನಗೊಂಡಿದ್ದಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 59ರ ಅನ್ವಯ ಆದೇಶ ಸ್ವೀಕರಿಸಿದ 30 ದಿನಗಳೊಳಗೆ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲ್ಮನವಿಯನ್ನು ಅಪರ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆ, ವಿಧಾನಸೌಧ, ಬೆಂಗಳೂರು ಅವರಿಗೆ ಸಲ್ಲಿಸಬಹುದಾಗಿದೆ.








