

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಮಹಿಳಾ ಮೆಕ್ಯಾನಿಕ್ ಒಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲ ನಗರದ ಅರಿಶಿನಕುಂಟೆ ಬಳಿಯಿರುವ ಕೆಎಸ್ಆರ್ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಕ್ಷ್ಮಿ(40) ಎಂಬುವವರ ಮೇಲೆ ಹಲ್ಲೆಯಾಗಿದೆ.
ನಿನ್ನೆ(ನ.11) ರಾತ್ರಿ ಸುಮಾರು 8:30ರ ವೇಳೆಗೆ ಲಕ್ಷ್ಮಿ ಅವರು ತಮ್ಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಅಲ್ಲಿಗೆ ಬಂದ ಅಮಾನತುಗೊಂಡಿರುವ ಸಹೋದ್ಯೋಗಿ ಶಿವರಾಜ್ ಎಂಬಾತ, ಏಕಾಏಕಿ ಲಕ್ಷ್ಮಿ ಅವರ ಮೇಲೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಅವರು ಆರೋಪಿ ಶಿವರಾಜ್ ವಿರುದ್ಧ ಸಾಕ್ಷಿ ಹೇಳಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಶಿವರಾಜ್ ಈ ರೀತಿ ಮಾಡಿದ್ದಾನೆ. ಆರೋಪಿ ಶಿವರಾಜ್ ಕಳೆದ ಕೆಲವು ತಿಂಗಳುಗಳಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಎಂದು ತಿಳಿದುಬಂದಿದೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಿ ಅವರನ್ನು ತಕ್ಷಣವೇ ಸ್ಥಳೀಯರು ಹಾಗೂ ಡಿಪೋ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಿವರಾಜ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿರುವುದಾಗಿ ತಿಳಿದುಬಂದಿದೆ.







