






ಪಾಲಕ್ಕಾಡ್: ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕರಿಂಬದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಇರ್ಫಾನಾ ಶೆರಿನ್ ಪಿ ಎ, ರಿಧಾ ಫಾತಿಮಾ, ನಿಧಾ ಫಾತಿಮಾ ಕೆ ಎಂ ಮತ್ತು ಆಯಿಷಾ ಎ ಎಸ್ ಎಂದು ಗುರುತಿಸಲಾಗಿದೆ.
ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15 ರ ಸುಮಾರಿಗೆ ಈ ಘಟನೆ ನಡೆದಿದೆ.
ಐವರು ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಮನೆಗೆ ಮರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿದ್ಯಾರ್ಥಿಗಳ ಮೇಲೆ ಬಿದ್ದ ಕಾರಣ ಅವಘಡ ಸಂಭವಿಸಿದೆ. ಮೂವರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮತ್ತೋರ್ವ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.