




ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ.
ಗಾಯಗೊಂಡವರನ್ನು ಬಸ್ ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ಕಾಶಿಬೆಟ್ಟು ನಿವಾಸಿ ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸುಮಾರು 5 ಕಿಲೋಮೀಟರ್‌ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು, ವಿಶೇಷವಾಗಿ ಧರ್ಮಸ್ಥಳ, ಸುಬ್ರಹ್ಮಣ್ಯದಂತಹ ಯಾತ್ರಾಸ್ಥಳಗಳಿಗೆ ತೆರಳುತ್ತಿದ್ದವರು ಹಾಗೂ ಬೆಂಗಳೂರು, ಮಂಗಳೂರು ಕಡೆಗೆ ಸಾಗುತ್ತಿದ್ದವರು ತೀವು ತೊಂದರೆ ಅನುಭವಿಸಿದರು.