- Advertisement -
- Advertisement -






ಹಾಸನ : ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ.
ಬಸ್ಸಿನ ಟೈಯರ್ ಸ್ಪೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.
ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಲ ಪ್ರಯಾಣಿಕರ ಮೊಬೈಲ್ ಫೋನ್, ಲಗೇಜ್ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








