


ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನವೆಂಬರ್ 2ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಗುಡುಗು-ಮಿಂಚು ಕೂಡ ಸಂಭವಿಸಬಹುದು. ನವೆಂಬರ್ 1ರಿಂದ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿದುಬಂದಿದೆ.








