


ಹೈದರಾಬಾದ್: ದಾಂಡಿಯಾ ಸಂಭ್ರಮಾಚರಣೆಯ ವೇಳೆ ಲೈಟಿಂಗ್ ಕಂಬ ಬಿದ್ದು ಮೂವರು ವಿದ್ಯಾರ್ಥಿನಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ಹೊರವಲಯದ ನಾದರ್ಗುಲ್ನಲ್ಲಿರುವ ಎಂವಿಎಸ್ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ನವರಾತ್ರಿ ಹಿನ್ನೆಲೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ದಾಂಡಿಯಾ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಮೈದಾನದಲ್ಲಿ ದಾಂಡಿಯಾ ನೃತ್ಯ ಮಾಡುತ್ತಿದ್ದಾಗ ಯಾವುದೇ ಮುನ್ಸೂಚನೆ ಇಲ್ಲದೆ ಭಾರೀ ತೂಕದ ಕಬ್ಬಿಣದ ಲೈಟಿಂಗ್ ಕಂಬಗಳ ಚೌಕಟ್ಟು ಏಕಾಏಕಿ ವಿದ್ಯಾರ್ಥಿಗಳ ಮೇಲೆ ಕುಸಿದು ದುರಂತ ಸಂಭವಿಸಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತಕ್ಕೆ ಕಾರಣರಾದವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದ್ದಾರೆ.
ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಇಬ್ಬರು ವಿದ್ಯಾರ್ಥಿನಿಯರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ವಿದ್ಯಾರ್ಥಿನಿಯರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಗೊಂಡ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ದುರಂತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಹಾರೈಸಿರುವ ಅವರು, ಸಂಕಷ್ಟದ ಸಮಯದಲ್ಲಿ ಕುಟುಂಬಗಳೊಂದಿಗೆ ಇರುವುದಾಗಿ ತಿಳಿಸಿದ್ದಾರೆ.








