Monday, April 29, 2024
spot_imgspot_img
spot_imgspot_img

ಇದ್ರೀಶ್ ಪಾಷಾ ಕೊಲೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು ಮಂಜೂರು

- Advertisement -G L Acharya panikkar
- Advertisement -

ಬೆಂಗಳೂರು : ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಇದ್ರೀಶ್ ಪಾಷಾ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕೊಲೆ ಪ್ರಕರಣದ ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರು ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ, ಅರುಣ್‌ ಶ್ಯಾಮ್, ”ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಸ್ ಪಾಷಾ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ. ಗಂಭೀರ ಗಾಯಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ.

ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು. ನ್ಯಾಯಪೀಠವು ಈ ವಾದಾಂಶವನ್ನು ಪುರಸ್ಕರಿಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕಳೆದ ಮಾರ್ಚ್ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ ಸಮೀಪ ಅಡ್ಡಗಟ್ಟಿದ್ದ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಆ ವಾಹನದಲ್ಲಿದ್ದ ಇದ್ರೀಶ್ ಪಾಷಾ ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್‌ ಠಾಣೆಯಿಂದ 100 ಮೀಟರ್‌ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಸಾರ್ವಜನಿಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪುನೀತ್ ಮತ್ತು ಸಹಚರರಿಂದ ಪಾಷ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಇದ್ರೀಶ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು.

ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302, 324, 341, 504, 506 ಜೊತೆಗೆ 34 ಆಟ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ಪುನೀತ್ ಕೆರೆಹಳ್ಳಿ ಮತ್ತು ಉಳಿದ ಆರೋಪಿಗಳು ಪರಾರಿಯಾಗಿದ್ದರು. ಏಪ್ರಿಲ್ 5ರಂದು ಆರೋಪಿಗಳನ್ನು ರಾಜಸ್ಥಾನದ ಬನ್ಸವಾರಾ ಬಳಿ ರಾಮನಗರ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ರಾಮನಗರಕ್ಕೆ ಕರೆ ತಂದಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕನಕಪುರ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

- Advertisement -

Related news

error: Content is protected !!