





ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಔಷಧ ವಿತರಣೆ ಮಾಡುತ್ತಿರುವುದರಿಂದ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಲಾಗಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.