



ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜುಲೈ 11ರಂದು ಏನೆಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದ್ದು ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಮುತ್ಲಾಜೆ ನಿವಾಸಿ ಚೆನ್ನಪ್ಪ ಗೌಡ (68) ಎಂದು ಗುರುತಿಸಲಾಗಿದೆ.
ಮನಮೋಹನ ಅವರು ನೀಡಿದ ದೂರಿನ ಪ್ರಕಾರ ಚೆನ್ನಪ್ಪ ಗೌಡ ಅವರು ರಸ್ತೆ ದಾಟುತ್ತಿದ್ದ ವೇಳೆ ಕೆಎ 19 ಎಫ್ 2952 ನೋಂದಣಿಯ ಕೆಎಸ್ಆರ್ಟಿಸಿ ಬಸ್ ಅನ್ನು ಚಾಲಕ ವಿಘ್ನೇಶ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಚೆನ್ನಪ್ಪ ಗೌಡ ರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದರೂ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ 106ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








