ಇಂದು 21ನೇ ವರ್ಷದ ಕಾರ್ಗಿಲ್ ವಿಜಯ ದಿನ. ಕಾರ್ಗಿಲ್ ಯುದ್ಧ 1999ರ ಮೇನಲ್ಲಿ ಆರಂಭವಾಗಿ ಎರಡು ತಿಂಗಳ ಕಾಲ ನಡೆಯಿತು. ಲೇಹ್ ಹೆದ್ದಾರಿವರೆಗೆ ಆಕ್ರಮಿಸಿಕೊಂಡಿದ್ದ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಯಿತು. ಸೇನೆಯ ಅಧಿಕಾರಿಗಳು ಸೇರಿದಂತೆ ಅಂದಾಜು 600 ಮಂದಿ ಭಾರತೀಯ ಯೋಧರು ಹುತಾತ್ಮರಾದರು.
ಯುದ್ಧ ನಡೆದಿದ್ದು ಯಾವಾಗ..?
1999ರ ಮೇ ಮತ್ತು ಜುಲೈ ಈ 2 ತಿಂಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು. ಪಾಕ್ ಸೈನಿಕರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ ವಿಭಾಗವನ್ನು ಪುನಃ ಕೈವಶ ಮಾಡಿಕೊಳ್ಳಲು ಭಾರತ `ಆಪರೇಷನ್ ವಿಜಯ’ ಎಂಬ ಕಾರ್ಯಾಚರಣೆಯನ್ನು ನಡೆಸಿ ಜುಲೈನ 26ರಂದು ಯಶಸ್ವಿಯಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.
ಕಾರ್ಗಿಲ್ ಯುದ್ಧದಲ್ಲಿ ಭಾರತದ 600ಕ್ಕೂ ಅಧಿಕ ವೀರ ಸೈನಿಕರು ಹುತಾತ್ಮರಾಗಿ, 1200ಕ್ಕೂ ಹೆಚ್ಚು ಮಂದಿ ಅಂಗವಿಕಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.