


ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ನಿಗಮ-ಮಂಡಳಿಗಳ ಅಧ್ಯಕ್ಷರು, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ನೇಮಕಾತಿ ಪಟ್ಟಿ ಪ್ರಕಟಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಅಧಿಕೃತ ಲೆಟರ್‌ಹೆಡ್‌ನಲ್ಲಿ ಪ್ರಕಟಿಸಿರುವ ಪಟ್ಟಿಯಲ್ಲಿ ರಾಜ್ಯದ ಪ್ರಮುಖ ನಾಯಕರಿಗೆ ವಿವಿಧ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರು ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ನಿಗಮ-ಮಂಡಳಿ ಹಾಗೂ ಪ್ರಮುಖ ಸಾಂವಿಧಾನಿಕ ಹುದ್ದೆಗಳ ಜವಾಬ್ದಾರಿ ನೀಡಲಾಗಿದೆ.
ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬೇಲೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಹಾಗೂ ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಬಿ. ಶಿವಣ್ಣ, ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷರಾಗಿ ಕೆ. ಷಡಕ್ಷರಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ಪಿ.ಎಂ. ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಎ.ಆರ್. ಕೃಷ್ಣಮೂರ್ತಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಹಂಪನಗೌಡ ಬಾದರ್ಲಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಅಧ್ಯಕ್ಷರಾಗಿ ಡಿ.ಜಿ. ಶಾಂತನಗೌಡ ಹಾಗೂ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಚ್. ಶ್ರೀನಿವಾಸ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಹಾಂತೇಶ ಕೌಜಲಗಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾಗಿ ಎಸ್.ಎನ್. ಸುಬ್ಬಾರೆಡ್ಡಿ, ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಎನ್.ಎಚ್. ಕೋನರಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಬಸನಗೌಡ ದದ್ದಲ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಲ್ಲಮಪ್ರಭು ಪಾಟೀಲ್, ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಶ್ಯಾಮ್ ನಾಟೇಕರ್, ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷರಾಗಿ ಎಚ್.ಸಿ. ಲಲಿತ್ ರಾಘವ್ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಭಾಷ್ ರಾಠೋಡ್ ಅವರನ್ನು ನೇಮಕ ಮಾಡಲಾಗಿದೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ನಾಯಕರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡುವ ಮೂಲಕ ಪಕ್ಷದೊಳಗಿನ ಅಸಮಾಧಾನ ಶಮನಗೊಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ. ವಿಶೇಷವಾಗಿ ತನ್ವೀರ್ ಸೇಠ್, ಬೇಲೂರು ಗೋಪಾಲಕೃಷ್ಣ ಹಾಗೂ ಮಂಜುನಾಥ ಭಂಡಾರಿ ಅವರಿಗೆ ನೀಡಿರುವ ಹುದ್ದೆಗಳು ರಾಜಕೀಯವಾಗಿ ಮಹತ್ವ ಪಡೆದಿವೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಬಸನಗೌಡ ದದ್ದಲ್, ಬಿಎಂಟಿಸಿಗೆ ಎ.ಆರ್. ಕೃಷ್ಣಮೂರ್ತಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬಿ. ಶಿವಣ್ಣ ಅವರನ್ನು ನೇಮಕ ಮಾಡುವ ಮೂಲಕ ರಾಜ್ಯದ ವಿವಿಧ ಭಾಗಗಳ ನಾಯಕರಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಈ ನೇಮಕಾತಿಗಳು ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.








