


ಮಡಿಕೇರಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಮಲ್ಪೆ ಸಮುದ್ರ ತೀರದಲ್ಲಿ ನೀರು ಪಾಲಾಗಿದ್ದು, ಒಬ್ಬಾಕೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಬಾಲಕಿಯರಿಬ್ಬರು ಮೂರು ದಿನಗಳ ಹಿಂದೆ ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ, ಇಲ್ಲಿಗೆ ಹೇಗೆ ಬಂದರು..? ಸಮುದ್ರಕ್ಕೆ ಹಾರಿದರೇ? ಅಥವಾ ಆಕಸ್ಮಿಕವಾಗಿ ನೀರುಪಾಲಾದರೇ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.
ಮಡಿಕೇರಿಯ ಖಾಸಗಿ ಕಾಲೇಜೊಂದರ ಪ್ರಥಮ ಪಿಯಸಿ ವಿದ್ಯಾರ್ಥಿನಿಯರಾದ ಮಾನ್ಯ ಮತ್ತು ಯಶಸ್ವಿನಿ ಇಬ್ಬರು ಸಮುದ್ರದಲ್ಲಿ ನೀರುಪಾಲಾದವರು. , ಸಮುದ್ರದ ಅಲೆಗಳ ಹೊಡೆತಕ್ಕೆ ಸಿಕ್ಕಿ ಮಾನ್ಯ ಮೃತಪಟ್ಟರೆ, ನೀರಿನಲ್ಲಿ ಮುಳುಗೇಳುತ್ತಿದ್ದ ಯಶಸ್ವಿನಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸಿಕೊಂಡಿದ್ದಾಳೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು ಮಲ್ಪೆ ತೀರದಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗೇಳುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜಸೇವಕ, ಆಪತ್ಬಾಂಧವ ಈಶ್ವರ ಮಲ್ಪೆ ಅವರು ಸ್ಥಳಕ್ಕೆ ಧಾವಿಸಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನೂ ಮೇಲೆತ್ತಿ ಹಾಕಿದರು. ಆದರೆ, ಅಷ್ಟು ಹೊತ್ತಿಗಾಗಲೇ ಮಾನ್ಯ ಪ್ರಾಣ ಬಿಟ್ಟಿದ್ದಳು. ಮತ್ತೊಬ್ಬಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.
ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದು, ಗೊತ್ತಾಗದೇ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾಳೆ. ಇಬ್ಬರೂ ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು.ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್ ನೀಡಿದ್ದಾಳೆ ಎಂಬುದು ಪ್ರಾಥಮಿಕ ಮಾಹಿತಿ. ನಾಪತ್ತೆಯಾದ ಬಗ್ಗೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿತ್ತು. ಅದರ ನಡುವೆಯೇ ಈ ದುರಂತ ಸಂಭವಿಸಿದೆ.
ಮಾಹಿತಿ ಪ್ರಕಾರ ಮಡಿಕೇರಿಯಿಂದ ಮಂಗಳೂರಿಗೆ ಬಂದು ಅಲ್ಲಿಂದ ಮುಂದಿನ ದಾರಿ ಕಾಣದೆ ಮಲ್ಪೆ ತೀರಕ್ಕೆ ಬಂದಿದ್ದಾರೆ. ಅಲ್ಲಿ ಕುಳಿತಿದ್ದಾಗ ಕಡಲ ಅಲೆಗಳಿಗೆ ಸಿಲುಕಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಈ ಹಿನ್ನಲೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಈ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿದೆ.