




ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಿನಾಂಕ ಮಾರ್ಚ್ 22 ರಂದು ಪಂಪ್‌ವೆಲ್–ಎಕ್ಕೂರು ಪ್ರದೇಶದಲ್ಲಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತುಗಳನ್ನು ಸಾಗಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಪತ್ತೆ ಹಚ್ಚಿ ಹೈದರ್ @ ಹೈದರ್ ಆಲಿ (53),ಮೊಹಮ್ಮದ್ ಸಜಾದ್ (29), ಜೈಸನ್ ಮೆನೆಜಸ್ (26), ಎಂಬ ಮೂವರು ಆರೋಪಿಗಳನ್ನು ಬಂದಿಸಿದ್ದಾರೆ.
ಆರೋಪಿಗಳಿಂದ ಸುಮಾರು ರೂ. 2.50 ಲಕ್ಷ ಮೌಲ್ಯದ 26 ಗ್ರಾಂ ಎಂಡಿಎಂಎ, ರೂ. 37,000 ನಗದು, 5 ಮೊಬೈಲ್ ಫೋನ್‌ಗಳು, ತೂಕ ಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು ರೂ. 4,37,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಹೈದರ್ ಆಲಿಯ ಮೇಲೆ ಈ ಹಿಂದೆಯೇ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದ್ದು, ಉಳ್ಳಾಲ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಪ್ರಕರಣವೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ.








