₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ!





ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ₹16.40 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲನೇ ಪ್ರಕರಣದಲ್ಲಿ ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿದರು. ಈ ವೇಳೆ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು ₹10.40 ಲಕ್ಷ ಮೌಲ್ಯದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್-ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಮಾದಕವಸ್ತು ಸೇವನೆ, ಗಾಂಜಾ ಹೊಂದಿಕೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ಇನ್ನೊಂದು ಪ್ರಕರಣದಲ್ಲಿ ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚಿಲ್ (33) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ, ಜಿಪ್-ಲಾಕ್ ಕವರ್ಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧನರಾಜ್ ಪೂಜಾರಿ ವಿರುದ್ದ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಮತ್ತು ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ ಮೂರು ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು.
ಈ ಮಾದಕವಸ್ತು ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ.








