

ಮಂಗಳೂರು: ನಗರದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು LSD (Lysergic Acid Diethylamide) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ LSD ಸ್ಟ್ರಿಪ್ ತರಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ನ. 03 ರಂದು ಮಧ್ಯಾಹ್ನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 3 ಲಕ್ಷ ರೂ. ಮೌಲ್ಯದ 100 LSD ಡ್ರಗ್ಸ್ ಸ್ಟ್ರಿಪ್ ಹಾಗೂ 3 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3,35,000 ರೂ. ಎಂದು ಅಂದಾಜಿಸಲಾಗಿದೆ.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬಂಧಿತರಲ್ಲಿ ಮೊದಲ ಆರೋಪಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್, 30 ವರ್ಷ, ಈತ ಮಂಗಳೂರು ಸಾಮಿಲ್ ಹತ್ತಿರದ ಅಳಪೆ ಪಡೀಲ್ನ ತುಂಬೆ ನಿವಾಸಿ. ಈತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಎರಡನೇ ಆರೋಪಿ ಸಿದ್ದಾರ್ಥ ಶೆಟ್ಟಿ, 35 ವರ್ಷ, ಈತ ಉರ್ವಸ್ಟೋರ್ ದಡ್ಡಲ್ಕಾಡ್ನ ಎಮಿಲಾಯ್ ಮ್ಯಾನ್ಷನ್ ಅಪಾರ್ಟ್ಮೆಂಟ್ ನಿವಾಸಿ. ಈತನ ವಿರುದ್ಧ ಮಂಗಳೂರಿನ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ, ಗಾಂಜಾ ಮಾರಾಟ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ.
ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








