

ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಭೋಪಾಲ್ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಅಮಲೇರಿದ ಸ್ಥಿತಿಯಲ್ಲಿ ಆರೋಪಿ ಸಿಗರೇಟ್ ಸೇದುತ್ತಾ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ.
ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಹಲವು ಕಾಂಗ್ರೆಸ್ ನಾಯಕರು ವೈರಲ್ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








