Sunday, June 7, 2026
spot_imgspot_img
spot_imgspot_img

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ..!

- Advertisement -
- Advertisement -

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ , ಯಡಿಯೂರಪ್ಪ ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮತ್ತೊಂದೆಡೆ, ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಯಡಿಯೂರಪ್ಪ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ದೂರುದಾರ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ಏಪ್ರಿಲ್​​​ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಹೈಕೋರ್ಟ್​ಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಮಾರ್ಚ್​​ನಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯಡಿಯೂರಪ್ಪ ಮಾತ್ರವಲ್ಲದೆ ರಾಜಕಾರಣಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಆದರೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೂರುದಾರ ಮಹಿಳೆ ಇತ್ತೀಚೆಗೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!