Sunday, June 14, 2026
spot_imgspot_img
spot_imgspot_img

ಪ್ರಜ್ವಲ್‌ ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ನನ್ನ ತಾಳ್ಮೆಯನ್ನು ಪರೀಕ್ಷಿಸಬೇಡ : ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ

- Advertisement -
- Advertisement -

ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೂಡಲೇ ವಿದೇಶದಿಂದ ವಾಪಸ್ ಆಗುವಂತೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರು ಸೂಚನೆ ನೀಡಿದ್ದಾರೆ.

ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು, ನನ್ನ ತಾಳ್ಮೆಯನ್ನು ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮೊಮ್ಮಗನಿಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡರು, ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ.

ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ. ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಆರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪಾದತಳದಲ್ಲಿ ಇರಿಸಿದ್ದೇನೆ.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರವೊಂದನ್ನು ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!