


ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಮೇಲೂ ಕನ್ನಡ ಧ್ವಜ ಹಾರಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಕಂಪನಿಗಳ ಮೇಲೂ ಕನ್ನಡ ಧ್ವಜ ಹಾರಿಸುವಂತೆ ಆದೇಶ ಹೊರಡಿಸಲು ಸಿದ್ಧತೆ ನಡೆಸಲಾಗಿದೆ, ಈ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಕುರಿತು ಕೆಲವು ವಿಚಾರಗಳನ್ನು ಮಂಡಿಸಲಾಗುವುದು. ಸಾರ್ವಜನಿಕರು ಹಾಗೂ ಶಾಸಕರ ಅಭಿಪ್ರಾಯಗಳಿಗೂ ಅವಕಾಶ ನೀಡಲಾಗುತ್ತದೆ. ಬಳಿಕ ಕೇಂದ್ರ ಸರ್ಕಾರಕ್ಕೆ ನಿರ್ಣಯ ಕಳುಹಿಸಿಕೊಡಲಾಗುವುದು ಎಂದು ಡಿಕೆಶಿ ತಿಳಿಸಿದರು.
ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜಕ್ಕೆ ಮತ್ತೊಂದು ಬಣ್ಣವನ್ನು ಸೇರಿಸುವುದರ ಜೊತೆಗೆ, ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಧ್ವಜದ ವಿನ್ಯಾಸ ಮತ್ತು ಬಳಕೆಗೆ ಸಂಬಂಧಿಸಿದಂತೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವ ಸಿದ್ಧತೆ ನಡೆಯುತ್ತಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿದ ಬಳಿಕ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಕನ್ನಡ ಭಾಷೆಗೆ ಯಾವುದೇ ಗಡಿಗಳಿಲ್ಲ. ಬ್ರಿಟಿಷರ ಆಡಳಿತದ ಕಾಲದಲ್ಲಿಯೂ ಮಕ್ಕಳ ಮಾತೃಭಾಷೆಯ ಆಯ್ಕೆಗೆ ಸಂಬಂಧಿಸಿದ ಇತಿಹಾಸವಿದೆ. ಕನ್ನಡಕ್ಕೆ ಸುದೀರ್ಘ ಸಾಂಸ್ಕೃತಿಕ ಪರಂಪರೆಯಿದೆ ಎಂದು ಡಿಕೆಶಿ ಹೇಳಿದರು. ಭುವನೇಶ್ವರಿ ತಾಯಿ ಕನ್ನಡ ಭಾಷೆಯ ರಕ್ಷಕ ದೇವತೆಯಾಗಿದ್ದು, ಇಂದು ಅವರಿಗೆ ಪೂಜೆ ಸಲ್ಲಿಸಲಾಗಿದೆ. ನಮ್ಮ ಉಸಿರು, ಭಾಷೆ, ನೆಲ ಹಾಗೂ ಧ್ವಜವನ್ನು ರಕ್ಷಿಸಲು ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಕರೆ ನೀಡಿರುವುದಾಗಿ ತಿಳಿದುಬಂದಿದೆ.
ದೇಶ-ವಿದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಕನ್ನಡಿಗರಿಗೆ ಹೆಮ್ಮೆಯಿಂದ ಧನ್ಯವಾದಗಳನ್ನು ಅರ್ಪಿಸಿದ ಅವರು, ಕರ್ನಾಟಕದ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.








