ಸಂಘ ಪರಿವಾರದ 17 ಮಂದಿ ವಿರುದ್ಧದ ಪ್ರಕರಣ ವಜಾ ಹಿನ್ನಲೆ :ಪುತ್ತಿಲ ಪರಿವಾರದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ




ಪುತ್ತೂರು: ಸರಕಾರಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ 17 ಮಂದಿ ಆರೋಪಿಗಳ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿ ವಜಾಗೊಂಡ ಬೆನ್ನಲ್ಲೇ ಸಂಘ ಪರಿವಾರದ ವಿರುದ್ಧ ಪುತ್ತಿಲ ಪರಿವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಪುತ್ತೂರು ಸರ್ಕಾರಿ ಆಸ್ಪತ್ರೆಯ ಹಿಂದಿನ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರಿಗೆ ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಹಿಂದು ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ 2025ರ ಏ.26ರಂದು ಬೆಳಗ್ಗೆ ಪ್ರತಿಭಟನೆ ನಡೆದಿತ್ತು.ಇದರಿಂದಾಗಿ ಕೆಲ ಸಮಯ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ತೊಂದರೆ ಮಾಡಿದ್ದಲ್ಲದೆ, ರಸ್ತೆಯಿಂದ ಏಳುವಂತೆ ಸೂಚನೆ ನೀಡಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ 27ಕ್ಕೂ ಅಧಿಕ ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪೈಕಿ 17 ಮಂದಿ ಸಂಘ ಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದರೆ 10 ಮಂದಿ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದರು. ಆರೋಪಿಗಳ ಪೈಕಿ ಸಂಘ ಪರಿವಾರದಲ್ಲಿ ಗುರುತಿಸಿಕೊಂಡವರ ಮೇಲಿನ ಪ್ರಕರಣ ರದ್ದುಗೊಳಿಸುವಂತೆ ಹಿರಿಯ ವಕೀಲರ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಫೆ.9ರಂದು ಅರ್ಜಿ ಸಲ್ಲಿಸಿದ್ದರು. ಆದರೆ ಪುತ್ತಿಲ ಪರಿವಾರದವರ ಪರ ಅರ್ಜಿ ಸಲ್ಲಿಸಿರಲಿಲ್ಲ. ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ 17 ಮಂದಿ ಆರೋಪಿಗಳ ಮೇಲಿನ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿತ್ತು. ಕೇವಲ ಸಂಘ ಪರಿವಾರದಲ್ಲಿ ಗುರುತಿಸಿಕೊಂಡ ಆರೋಪಿಗಳ ಮೇಲಿನ ಪ್ರಕರಣವನ್ನು ಮಾತ್ರ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವಿಚಾರದಲ್ಲಿ ಇದೀಗ ಪುತ್ತಿಲ ಪರಿವಾರದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದ್ದು, ಸಂಘ ಪರಿವಾರ ಹಾಗೂ ಪುತ್ತಿಲ ಪರಿವಾರದ ನಡುವಿನ ಮುಸುಕಿನ ಗುದ್ದಾಟ ಮತ್ತೆ ಮುನ್ನೆಲೆಗೆ ಬರುತ್ತಿದೆ.








