Friday, April 26, 2024
spot_imgspot_img
spot_imgspot_img

ಇಂದಿನಿಂದ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು, ಇಂದಿನಿಂದ ಆಗಸ್ಟ್ 17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಆ. 17ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ.

ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಂಗಳವಾರದವರೆಗೂ ಚದುರಿದ ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ವರ್ಷ ಕೊಡಗಿನಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ. ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್, ಬಿಹಾರ, ಒರಿಸ್ಸಾ, ಆಂಧ್ರಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಇಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕೊಡಗಿನಲ್ಲಿ ಮಳೆಯಾಗಿರುವುದರಿಂದ ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.

- Advertisement -

Related news

error: Content is protected !!