Thursday, July 2, 2026
spot_imgspot_img
spot_imgspot_img

ರಾಮನಗರದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ – ಬಂಡೆ ಕುಸಿದು 7 ಕಾರ್ಮಿಕರು ಸಾವು

- Advertisement -
- Advertisement -

ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದ ಪರಿಣಾಮ ಭಾರೀ ಅನಾಹುತ ನಡೆದಿದೆ.

ದುರಂತದ ವೇಳೆ ಕ್ವಾರಿಯಲ್ಲಿ ಸುಮಾರು 10 ರಿಂದ 15 ಮಂದಿ ಬಿಹಾರ ಮೂಲದ ಕಾರ್ಮಿಕರು ಹಾಗೂ 2 ರಿಂದ 3 ಮಂದಿ ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಿಟಾಚಿ ಯಂತ್ರದ ಮೂಲಕ ಕಾಮಗಾರಿ ನಡೆಯುತ್ತಿದ್ದಾಗ ಏಕಾಏಕಿ ಬಂಡೆ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ 5 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ದುರಂತದ ಕುರಿತು ಮಾಹಿತಿ ನೀಡಿದ ಹಿಟಾಚಿ ಯಂತ್ರದ ಚಾಲಕ, ತಾನು ಕೆಲಸ ಮಾಡುತ್ತಿದ್ದ ಸ್ಥಳದಿಂದ ಕೇವಲ 10 ಅಡಿ ದೂರದಲ್ಲಿ ಬಂಡೆ ಕುಸಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ತಿಳಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ, ಅಗತ್ಯ ಅನುಮತಿ ಪಡೆಯದೆ ಕಲ್ಲು ಸ್ಫೋಟ ನಡೆಸಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ. ಆದರೆ ದುರಂತಕ್ಕೆ ನಿಖರ ಕಾರಣವೇನು ಎಂಬುದು ಸ್ಥಳ ಪರಿಶೀಲನೆಯ ನಂತರವೇ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಟಿ. ಸೋಮಶೇಖರ್, 10 ಮಂದಿ ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಕೂಡ ಕ್ವಾರಿಗಳ ಸುರಕ್ಷತೆ ಕುರಿತು ಎಚ್ಚರಿಕೆ ನೀಡಲಾಗಿತ್ತು. ಆದರೂ ನಿರ್ಲಕ್ಷ್ಯ ಮುಂದುವರಿದಿದೆ.
ಪ್ರಕರಣ ಸಂಬಂಧ ಸ್ಥಳೀಯ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಪಾತ್ರದ ಕುರಿತು ತನಿಖೆ ನಡೆಸಬೇಕು. ದುರಂತಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಸ್ತುತ ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುರಂತಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!