


ಶಿವಮೊಗ್ಗ: ತಾಲೂಕಿನ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ – ಕ್ಯಾಸನೂರು ಫಾರೆಸ್ಟ್ ಡಿಸೀಸ್) ಭೀತಿ ಆರಂಭವಾಗಿದ್ದು, ಈ ಸಾವು ಕೆಎಫ್‌ಡಿ ಸೋಂಕಿನಿಂದ ಸಂಭವಿಸಿರುವ ವರ್ಷದ ಮೊದಲ ಪ್ರಕರಣ ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಗಂಭೀರಗೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ನಿನ್ನೆ ತಡರಾತ್ರಿ ಸುಮಾರು 2.30ರ ವೇಳೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.








