Sunday, November 22, 2026
spot_imgspot_img
spot_imgspot_img

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳಿಗೆ ಶಾಕ್ – 100+ ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ನಗರದ ವಿವಿಧೆಡೆ ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ರೌಡಿ ಸ್ಕ್ವಾಡ್ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನೂತನ ನಗರ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ಕೂಡ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ, ರೌಡಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಹಿನ್ನೆಲೆ ರೌಡಿ ಸ್ಕ್ವಾಡ್ ಮುಖ್ಯಸ್ಥ ಹಾಗೂ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ನಗರದ ಎಲ್ಲಾ ವಿಭಾಗಗಳ ಹಿರಿಯ ಪೊಲೀಸ್ ಅಧಿಕಾರಿಗಳು ದಾಳಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಕುಖ್ಯಾತ ರೌಡಿಶೀಟರ್‌ಗಳ ಪಟ್ಟಿಯ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಾಗಿದ್ದು, ಅವರ ಪ್ರಸ್ತುತ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ.

ಇನ್ನು ರೌಡಿ ಸ್ಕ್ವಾಡ್ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್ ಹಾಗೂ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ.

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿರುವ ರೌಡಿಶೀಟರ್ ಕಿಶೋರ್ ಅಲಿಯಾಸ್ ಗುಡ್ಡೆ ಮನೆಗೂ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಈ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ರೌಡಿಶೀಟರ್‌ಗಳ ಚಲನವಲನ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದಾರೆ.

- Advertisement -

Related news

error: Content is protected !!