



ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ನಿನ್ನೆ(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನೊಳಗೊಂಡ ಒಂದು ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಸಚಿವರನ್ನೊಳಗೊಂಡ ಕಾರ್ಯಪಡೆ ರಚನೆಯನ್ನು ಘೋಷಿಸಿದ ಮುಖ್ಯಮಂತ್ರಿ, ಇದು ಸಾಮಾಜಿಕ ಪಿಡುಗನ್ನು ತೊಡೆದುಹಾಕಲು ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತ ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗೃಹ ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾದಕ ವಸ್ತು ಜಾಲದ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಶೇ. 50 ರಷ್ಟು ಬೆಂಗಳೂರು ಹಾಗೂ ಶೇ. 22ರಷ್ಟು ಮಂಗಳೂರಿನಲ್ಲಿ ವರದಿಯಾಗಿದೆ. ಉಳಿದ ಶೇ. 28 ರಷ್ಟು ಪ್ರಕರಣಗಳು ರಾಜ್ಯದ ಇತರೆ ಜಿಲ್ಲೆಗಳಲ್ಲಿ ದಾಖಲಾಗಿವೆ. ಬೆಂಗಳೂರು ಪೂರ್ವ ವಲಯ ದಂಧೆಯ ತಾಣವಾಗಿದೆ ಎಂದು ಮಾಹಿತಿ ನೀಡಿದರು.