




ಬೆಂಗಳೂರು: “ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ‘ಸಾಮಾನ್ಯ ಪ್ರವೇಶ ಪರೀಕ್ಷೆ’ ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ” ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಶನಿವಾರ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆ ನಡೆಸಲು ಅಗತ್ಯ ಆದೇಶಗಳನ್ನು ನೀಡಬೇಕೆಂದು ನ್ಯಾಯಾಲಯದ ಮುಂದೆ ಮನವಿ ಮಾಡಿದರು. ರಾಜ್ಯ ಸರ್ಕಾರ ಮತ್ತು ಕೆಇಎ ಕ್ರಮವು ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.ಏಪ್ರಿಲ್ 16 ಮತ್ತು 17ರಂದು ರಾಜ್ಯಾದ್ಯಂತ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆಗಳು ನಡೆದಿದ್ದು, ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು, ಈ ಸಮಯದಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳ ಪ್ರತಿರೋಧದ ಹೊರತಾಗಿಯೂ ಅವರ ಜನಿವಾರವನ್ನು ಬಲವಂತವಾಗಿ ಕತ್ತರಿಸಲಾಗಿದೆ. ಜನಿವಾರ ತೆಗೆದುಹಾಕಲು ನಿರಾಕರಿಸಿದವರಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಬೀದರ್, ಶಿವಮೊಗ್ಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ನಡೆದಿವೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದೆ.
ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಜನಿವಾರ ತೆಗೆಸಲು ಮುಂದಾದ ಕಾರಣದಿಂದ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೂ ಸರ್ಕಾರಿ ಸೀಟು ನೀಡುವುದಕ್ಕೆ ನಿರ್ಧರಿಸಲಾಗಿದೆ. ಈ ಘಟನೆ ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇದು ಸರ್ಕಾರಕ್ಕೂ ನೋವುಂಟು ಮಾಡಿದೆ. ತಪ್ಪಿತಸ್ಥ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಅಂಶವನ್ನು ಪೀಠಕ್ಕೆ ವಿವರಿಸಲಾಗುವುದು ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.