

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಲುಕ್ಕಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.