


ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನ ಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
20 ವರ್ಷದ ಉದಯ್ ಮೃತ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಉದಯ್, ಓದಿನ ಜೊತೆಗೆ ಬಾಟಾ ಶೋರೂಂನಲ್ಲೂ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದ. ಉದಯ್‌ಗಾಗಿ ಪೋಷಕರಾದ ಸುರೇಶ್ ಹಾಗೂ ಪ್ರೇಮಲತಾ ದಂಪತಿ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿ ಕಟ್ಟಿಸಿಕೊಟ್ಟಿದ್ದರು.
ಮನೆಯ ಮೇಲಿನ ಕೊಠಡಿಯಲ್ಲೇ ಉದಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಮೂರು ದಿನಗಳ ಕಾಲ ಯಾರಿಗೂ ಘಟನೆ ಗೊತ್ತಾಗಿರಲಿಲ್ಲ. ಬಳಿಕ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬಸ್ಥರು ಕೊಠಡಿ ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನುವ ಮಾಹಿತಿ ಸಿಕ್ಕಿದ್ದು, ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ತಿಳಿಯಬೇಕಿದೆ.
ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ನೆಲಮಂಗಲ ಶವಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.








