


ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿದ್ದ ಹಿನ್ನೆಲೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ.
ಕಾವ್ಯ(25) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ನಿವಾಸಿಯಾಗಿದ್ದ ಕಾವ್ಯ, ಮದುವೆಯಾದ ಬಳಿಕ ಪತಿ ನವೀನ್ ಜೊತೆ ನೆಲಮಂಗಲದ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು. ಮೂರು ವರ್ಷಗಳ ಹಿಂದೆ ಕುಟುಂಬದವರ ಒಪ್ಪಿಗೆಯೊಂದಿಗೆ ಇವರ ಮದುವೆ ನಡೆದಿತ್ತು.
ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗದ ಕಾರಣ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಮನನೊಂದ ಕಾವ್ಯ, ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.
ಕಾವ್ಯ ಪೋಷಕರು ಪತಿ ನವೀನ್ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪ ಮಾಡಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.








