

ಹೈದರಾಬಾದ್: ತೆಲಂಗಾಣದ ಆದಿಲಾಬಾದ್ನ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಎರಡು ನವಜಾತ ಶಿಶುಗಳು ಸಾವನ್ನಪ್ಪಿದೆ.
ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಆರೈಕೆ ಘಟಕದಲ್ಲಿ ಸೋಮವಾರ ರಾತ್ರಿ ಸುಮಾರು 11:50ರ ವೇಳೆಗೆ ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಏರ್ಕಂಡಿಷನರ್ಗೆ ಸಂಬಂಧಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬೆಂಕಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.
ಬೆಂಕಿ ಕಾಣಿಸಿಕೊಂಡ ಕೂಡಲೇ ವಾರ್ಡ್ನಲ್ಲಿ ದಟ್ಟ ಹೊಗೆ ಮತ್ತು ಜ್ವಾಲೆ ಆವರಿಸಿಕೊಂಡಿತ್ತು. ಈ ವೇಳೆ ವಾರ್ಡ್ನಲ್ಲಿದ್ದ ಒಟ್ಟು 28 ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ ಎರಡು ಶಿಶುಗಳನ್ನು ರಕ್ಷಿಸಲು ಸಾಧ್ಯವಾಗದೇ ಮೃತಪಟ್ಟಿವೆ.
ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ವಾಹನ ಸ್ಥಳಕ್ಕೆ ಧಾವಿಸಿದೆ. ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿನ ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಏರ್ಕಂಡಿಷನರ್ ಸೇರಿದಂತೆ ಆಸ್ಪತ್ರೆಯ ವಿದ್ಯುತ್ ವ್ಯವಸ್ಥೆಯಲ್ಲಿ ದೋಷವಿತ್ತೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.
ಘಟನೆ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಶಿಶುಗಳ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಗ್ನಿ ಅವಘಡದಿಂದ ಪರಿಣಾಮಕ್ಕೊಳಗಾದ ಎಲ್ಲ ಮಕ್ಕಳಿಗೂ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಮಕ್ಕಳ ಆರೋಗ್ಯದ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆಯೂ ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ರೇವಂತ್ ರೆಡ್ಡಿ ಆದೇಶಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಮತ್ತು ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆಯೂ ಸೂಚಿಸಿದ್ದಾರೆ. ತೆಲಂಗಾಣದಾದ್ಯಂತ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆ ಹಾಗೂ ವಿದ್ಯುತ್ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.







