

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಸಮೀಪದ ಅಖ್ರಾನ್ ಪ್ರದೇಶದಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ಬೈಕ್ನಲ್ಲಿ ಬಂದ ಉಗ್ರರು ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಕಾ ಬಳಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಮಧ್ಯಾಹ್ನ ಸುಮಾರು 2:15ರ ವೇಳೆಗೆ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಿಆರ್ಪಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ದಾಳಿಯಲ್ಲಿ ಗಾಯಗೊಂಡ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಅನಂತನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. ಅಖ್ರಾನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.








