ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ. ಹೀಗಾಗಿ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಅಯೋಧ್ಯೆ ರಾಮಮಂದಿರ ನಿರ್ಮಾಣ ಅತೀ ಸೂಕ್ಷ ವಿಚಾರ. ಹೀಗಾಗಿ ರಾಜ್ಯಾದ್ಯಂತ ತೀವ್ರ ನಿಗಾ ವಹಿಸಬೇಕು ಎಂದು ಎಲ್ಲ ವಲಯ ಐಜಿಪಿಗಳು ಮತ್ತು ಎಸ್ ಪಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.
ಇನ್ನು ನಾಳೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಭದ್ರತೆ ಬಗ್ಗೆ ಡಿಜಿಐಜಿಪಿ ಮತ್ತು ಎಡಿಜಿಪಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐಜಿಪಿ ಹಾಗೂ ಎಸ್ ಪಿಗಳ ಜತೆ ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯದೆಲ್ಲೆಡೆ ನಾಳೆ ಪೊಲೀಸ್ ಭದ್ರತೆ ಹೇಗಿರಲಿದೆ..?
ನಾಳೆ ಭೂಮಿಪೂಜೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ.
ಭೂಮಿ ಪೂಜೆ ದಿನ ಮತೀಯ ಸಂಘಟನೆಗಳ ಮೇಲೆ, ಸಿಎಎ, ಎನ್ ಆರ್ ಸಿ ಹೋರಾಟಗಾರರ ಮೇಲೆ ಕಣ್ಣಿಡಲಾಗುತ್ತದೆ. ಹಿಂದೂಪರ ಹಾಗೂ ಹಿಂದೂಯೇತರ ಸಂಘಟನೆ ಮೇಲೂ ಪೊಲೀಸರು ಕಣ್ಣಿಟ್ಟಿರುತ್ತಾರೆ. ನಾಳೆ ಯಾವುದೇ ವಿಜಯೋತ್ಸವ, ಮೆರವಣಿಗೆಗೆ ಅವಕಾಶವಿರುದಿಲ್ಲ. ಕೋಮು ಸೌಹಾರ್ದತೆಗೆ ಧಕ್ಕೆ ತರುವವರು ಕಂಡುಬಂದ್ರೆ ಪ್ರಿವೆಂಟೀವ್ ಸೆಕ್ಷನ್ ಅಡಿ ವಶಕ್ಕೆ ತೆಗೆದುಕೊಳ್ಳಲಾಗುವುದು. ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಎಂದು ಪೊಲೀಸರು ಸೂಚನೆ ನೀಡಿದ್ದಾರೆ.
ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಡಿಎಆರ್ , ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.