

ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಎಂದು ಗುರುತಿಸಲಾಗಿದೆ.
ಜೂ.28 ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ 11.50ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.