ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಿಜೆಪಿ ಮುಖಂಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಂಜಯ್ ಖೋಖರ್ ಎಂಬುವವರನ್ನು ಇಂದು ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ.

ಇಂದು ಬೆಳಿಗ್ಗೆ ಎಂದಿನಂತೆ ತಮ್ಮ ಮನೆಯ ಹತ್ತಿರದ ಹೊಲದಲ್ಲಿ ವಾಕಿಂಗ್ ಹೊರಟಿದ್ದಾಗ ಗುಂಡು ಹಾರಿಸಲಾಗಿದೆ. ಪಶ್ಚಿಮ ಉತ್ತರ ಪ್ರದೇಶದ ಬಾಗ್ಪಾತ್ ಹಳ್ಳಿಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಕುರಿತು 24 ಗಂಟೆಗಳಲ್ಲಿ ವರದಿ ಕೇಳಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಕಬ್ಬಿನ ಗದ್ದೆಯ ಪಕ್ಕದಲ್ಲಿ ಘಟನೆ ನಡೆದಿದ್ದು, ಮೂರು ಜನ ಶಂಕಿತರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. ಕೊಲೆಗೆ ಯಾವುದೇ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎನ್ನಲಾಗಿದೆ.

ಇದು ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೂ ಆಳವಾದ ತನಿಖೆ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಕೊಲೆಗಳು ಸಾಮಾನ್ಯವಾಗಿದ್ದು, ಕಳೆದ ತಿಂಗಳು ರಾಷ್ಟ್ರೀಯ ಲೋಕದಳ ಮುಖಂಡ ದೇಶ್‌ಪಾಲ್ ಖೋಖರ್‌ರವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹೆಚ್ಚುತ್ತಿರುವ ಕೊಲೆಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಯ ಕುರಿತು ಪ್ರಶ್ನೆಗಳು ಎದ್ದಿವೆ.
