



ಬಂಟ್ವಾಳ: ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿದ್ದ ಘನ ಲಾರಿಯನ್ನು ಪರಿಶೀಲಿಸಿದಾಗ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಬೈರಿಕಟ್ಟೆಯಲ್ಲಿ ಲಾರಿಯೊಂದು ರಸ್ತೆಯಲ್ಲಿ ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.
ಈ ವೇಳೆ KA-21-C-4608 ನೋಂದಣಿ ಸಂಖ್ಯೆಯ ಘನ ಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ. ಚಾಲಕ ಹಾಸನ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಎಂಬಾತನನ್ನು ವಿಚಾರಿಸಿದಾಗ ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾನೆ.
ಲಾರಿಯಲ್ಲಿದ್ದ ಲೋಡ್ ಬಗ್ಗೆ ವಿಚಾರಿಸಿದಾಗ ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ತುಂಬಿಸಿಕೊಂಡು ಸಾಗಿಸುತ್ತಿರುವುದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಲಾರಿಯನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 229/2026, ಕಲಂ: 303(2) BNS 2023, 4(1), 4(1A), 21 MMDR ACT 1957, ಕಲಂ: 3, 44 ಕರ್ನಾಟಕ ಮೈನರ್ ಮಿನರಲ್ ಕನ್ಸಿಸ್ಟೆಂಟ್ ರೂಲ್ಸ್ 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








